ಕೋಪವೆಂಬುದು ಅನರ್ಥ ಸಾಧನವು ; ಕೋಪದಿಂದಲೇ ಜಗಳ , ಕದನ, ಕೊಲೆ, ಹೊಡೆದಾಟ, ಬಡಿದಾಟ ಎಲ್ಲವು. ಕೋಪವನ್ನು ನಿಯಂತ್ರಿಸದಿದ್ದರೆ ದೊಡ್ಡ ದೊಡ್ಡ ಅನಾಹುತಗಳಿಗೆ ಎಡೆ ಮಾಡಿ ಕೊಡುವುದರಲ್ಲಿ ಎರಡು ಮಾತಿಲ್ಲ. ಸಂಬಂಧ ಗಳನ್ನು ಮುರಿದು ಒಬ್ಬರ ಮುಖ ಒಬ್ಬರು ನೋಡದಂತೆ ಮಾಡುವುದಕ್ಕೂ ಕಾರಣ ಈ 'ಕೋಪ' ಆದ್ದರಿಂದ ಕೋಪವನ್ನು ಹತೋಟಿಯಲ್ಲಿಟ್ಟರೆ ಚೆನ್ನ. ದೊಡ್ಡವರು ಹೇಳಿಲ್ಲವೇ ''ಕೋಪದಲ್ಲಿ ಹೋದ ಮೂಗು, ಶಾಂತವಾದ ಮೇಲೆ ಬಾರದು'' ಎಂದು'
ಕೋಪವನ್ನು ನಿಗ್ರಹಿಸದಿದ್ದಲ್ಲಿ ನೋವಿನ ಸುಳಿಗೆ ಸಿಲುಕಿ ನರಳ ಬೆಕಾಗುತ್ತೆ. ಇದಕ್ಕೊಂದು ನೀತಿ ಕಥೆಯುಂಟು.
ಒಬ್ಬ ಹುಡುಗ ಮಹಾ ಕೋಪಿಷ್ಟ. ಸುಲಭವಾಗಿ ಕೆರಳುತ್ತಿದ್ದ. ಇದನ್ನು ಕಂಡು ರೋಸಿದ ತಂದೆ ತನ್ನ ಮಗನಿಗೆ ಒಂದು ಚೀಲ ತುಂಬಾ ಮೊಳೆಗಳನ್ನು ಕೊಟ್ಟು ಪ್ರತೀ ಸಲ ಕೋಪ ಬಂದಾಗ ಮನೆಯ ಹಿಂದಿನ ಗೋಡೆಗೆ ಒಂದು ಮೊಳೆ ಹೊಡೆಯುವಂತೆ ಹೇಳುತ್ತಾನೆ. ಉತ್ಸಾಹದಿಂದ ಹೋಗುವ ಹುಡುಗ ಮೊದಲ ದಿನವೇ ೪೫ ಮೊಳೆಗಳನ್ನು ಹೊಡೆದು ಹಾಕುತ್ತಾನೆ ಗೋಡೆಗೆ. ಒಂದೆರಡು ವಾರಗಳಲ್ಲಿ ತನ್ನ ಕೋಪ ತಾಪ ಎಲ್ಲಾ ತಹಬಂದಿಗೆ ಬಂದು ಗೋಡೆಗೆ ಹೊಡೆಯಬೇಕಾದ ಮೊಳೆಗಳು ಸಂಖ್ಯೆಯಲ್ಲಿ ಕಡಿಮೆಯಾಗುತ್ತವೆ. ತನ್ನ ಅಪ್ಪ ಹೇಳಿದ ಹಾಗೆ ಮೊಳೆ ಹೊಡೆಯುವುದಕ್ಕಿಂತ ಸುಲಭ ತನ್ನ ಕೋಪವನ್ನು ನಿಯಂತ್ರಿಸುವುದು ಎಂದು ಈ ಹೊತ್ತಿಗಾಗಲೇ ಹುಡುಗ ಅರಿತು ಕೊಳ್ಳುತ್ತಾನೆ. ಕೊನೆಗೊಂದು ದಿನ ಹುಡುಗ ಮೊದಲಿನ ಥರ ಕೋಪಿಷ್ಠನಾಗದೇ ಮಂದಸ್ಮಿತನಾಗುತ್ತಾನೆ, ಸಂಯಮಿಯಾಗುತ್ತಾನೆ, ಮೊಳೆಯ ಚೀಲ ಬರಿದಾಗುತ್ತದೆ. ಈ ವಿಷಯವನ್ನು ತನ್ನ ತಂದೆಗೆ ಬಂದು ಹೇಳಿದಾಗ ತಂದೆ ಹೇಳುತ್ತಾನೆ, ಮಗನೇ, ಈಗ ಹೋಗಿ ನೀನು ಹೊಡೆದ ಮೊಳೆಗಳನ್ನೆಲ್ಲಾ ದಿನಕ್ಕೊಂದರಂತೆ ಕೀಳು ಎಂದು. ಮತ್ತೊಮ್ಮೆ ಗೋಡೆ ಕಡೆ ಮರಳಿದ ಹುಡುಗ ಸಾವಧಾನದಿಂದ ದಿನಕ್ಕೊಂದರಂತೆ ಒಂದೊಂದೇ ಮೊಳೆ ಗಳನ್ನು ಕೀಳುತ್ತಾನೆ. ಒಂದೆರಡು ವಾರಗಳ ತರುವಾಯ ಹುಡುಗ ಬಂದು ತಾನು ಎಲ್ಲಾ ಮೊಳೆಗಳನ್ನು ಕಿತ್ತ ವಿಷಯ ಹಿಗ್ಗುತ್ತಾ ತಂದೆಗೆ ತಿಳಿಸುತ್ತಾನೆ. ಮಗನನ್ನು ನೋಡಿ ಮುಗುಳ್ನಗುತ್ತಾ ಅವನ ಕೈ ಹಿಡಿದು ಕೊಂಡು ಹಿತ್ತಲಿನ ಗೋಡೆಗೆ ಬಂದ ತಂದೆ ಮಗನ ತಲೆ ತಡವುತ್ತಾ ಹೇಳುತ್ತಾನೆ, ಮಗೂ, ಎಷ್ಟು ಸುಂದರ ಕೆಲಸ ನೀನು ಮಾಡಿದೆ, ಆದರೆ ನೋಡು ಒಮ್ಮೆ ಗೋಡೆಯನ್ನು. ಮೊದಲಿನ ಹಾಗಿದೆಯೇ ಗೋಡೆ? ಎಷ್ಟೊಂದು ತೂತುಗಳು ಬಿದ್ದಿವೆ ನೋಡು ಗೋಡೆಯ ಮೇಲೆ. ಈ ಗೋಡೆ ಮೊದಲಿನ ಹಾಗೆ ಆಗಲು ಸಾಧ್ಯವೆ? ಎಂದಿಗೂ ಇಲ್ಲ. ನೀನು ಕೋಪದಲ್ಲಿ ಆಡಿದ ಮಾತುಗಳೂ ಸಹ ಹಾಗೆಯೇ. ನಿನ್ನ ಕೋಪದ ಮಾತುಗಳು, ಜನರಿಗೆ ಮಾಡಿದ ನೋವು ನೀನು ಮೊಳೆಗಳಿಂದ ಗೋಡೆಗೆ ಮಾಡಿದ ತೂತುಗಳಂತೆ. ಅವೆಂದೂ ಮಾಸಲಾರವು. ಒಬ್ಬನಿಗೆ ಚೂರಿ ಇರಿದು ಆ ಚೂರಿಯನ್ನು ಹಿಂದಕ್ಕೆ ಎಳೆಯಬಹುದು, ಆದರೆ ಆ ಚೂರಿ ಮಾಡಿದ ಗಾಯ? ಆ ಗಾಯ ಮಾಸುವುದೇ? ನೀನೆಷ್ಟೇ ಕ್ಷಮೆ ಕೋರಿದರೂ ಆ ಗಾಯ ಅಲ್ಲೇ ಇರುತ್ತದೆ. ಹಾಗಾಗಿ ಕೋಪ ಬಂದಾಗ ನಾವೇನೋ ಕೆಲಸ ಮಾಡ ಬೇಕಾದರೂ ಒಮ್ಮೆ ಯೋಚಿಸಿ ಮಾಡಬೇಕು, ಯಾರಿಗೂ ಅದರಿಂದ ನೋವುಂಟಾಗದಂತೆ ಎಚ್ಚರ ವಹಿಸಬೇಕು ಎಂದು ಬುದ್ಧಿ ಮಾತು ಹೇಳಿದರು.
ಅನರ್ಘ್ಯ ರತ್ನಗಳಂಥ ಮಾತುಗಳನ್ನು ತನ್ನ ಪ್ರೀತಿಯ ತಂದೆಯ ಬಾಯಿಂದ ಆಲಿಸಿದ ಹುಡುಗ ತಾನು ಇನ್ನು ಮುಂದೆ ಯಾವತ್ತು ಕೋಪದ ಕೈಗೆ ಬುದ್ಧಿ ಕೊಡುವುದಿಲ್ಲ ಎಂದು ಪ್ರಮಾಣ ಮಾಡಿ ಅದರಂತೆ ನಡೆದುಕೊಂಡು ಒಳ್ಳೆಯ ಸತ್ಪ್ರಜೆ ಯಾಗಿ ತನ್ನ ತಂದೆಗೆ ತಕ್ಕ ಮಗನಾಗಿ ಸುಖ ಬಾಳ್ವೆ ನಡೆಸುತ್ತಾನೆ ಎಂಬಲ್ಲಿಗೆ 'ಉಮ ಕಾಂಡದ' ಎರಡನೇ ಹರಿ ಕಥಾ ಶ್ರವಣವು ಇಲ್ಲಿಗೆ ಸಮಾಪ್ತಿಯಾಗುವುದು. ಜೈ ಪುಂಡರೀಕ ವರದೇ ...............ಹರ ಹರ ಮಹಾದೇವ್ !!!!